87
ತುತಿಗೀತೆ. ರಚನೆಗಾರರು: ಕೋರಹೀಯರು. 
 1 ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ. 
 2 ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು. 
 3 ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು. 
 4 ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. 
ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. 
ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ. 
 5 ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. 
ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು. 
 6 ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿಮಾಡಿದ್ದಾನೆ. 
ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ. 
 7 ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. 
ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. 
“ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.