99
 1 ಯೆಹೋವನೇ ರಾಜನು! 
ಜನಾಂಗಗಳು ಭಯದಿಂದ ನಡುಗಲಿ. 
ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. 
ಭೂಮಿಯು ಭಯದಿಂದ ನಡುಗಲಿ. 
 2 ಚೀಯೋನಿನ ಯೆಹೋವನು ದೊಡ್ಡವನು! 
ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ. 
 3 ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. 
ಆತನೇ ಪರಿಶುದ್ಧನು. 
 4 ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. 
ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. 
ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ. 
 5 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, 
ಆತನ ಪವಿತ್ರ ಪಾದಪೀಠಕ್ಕೆ* ಪಾದಪೀಠ ಬಹುಶಃ, ಇದು ದೇವಾಲಯವನ್ನು ಸೂಚಿಸುತ್ತದೆ. ಅಡ್ಡಬೀಳಿರಿ. 
 6 ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. 
ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. 
ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು. 
 7 ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. 
ಅವರು ಆಜ್ಞೆಗಳಿಗೆ ವಿಧೇಯರಾದರು. 
ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. 
 8 ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. 
ನೀನು ಕ್ಷಮಿಸುವ ದೇವರೆಂದೂ 
ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ. 
 9 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ. 
ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ. 
ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!