111
 1 ಯೆಹೋವನಿಗೆ ಸ್ತೋತ್ರವಾಗಲಿ! 
ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ 
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. 
 2 ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. 
ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು. 
 3 ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು. 
ಆತನ ನೀತಿಯು ಶಾಶ್ವತವಾದದ್ದು. 
 4 ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ 
ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ. 
 5 ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; 
ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. 
 6 ಆತನು ಅನ್ಯಜನಾಂಗಗಳ ದೇಶವನ್ನು 
ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ. 
 7 ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. 
ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. 
 8 ದೇವರ ಆಜ್ಞೆಗಳು ಶಾಶ್ವತವಾಗಿವೆ. 
ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ. 
 9 ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. 
ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ. 
 10 ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. 
ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. 
ಆತನಿಗೆ ಸದಾಕಾಲ ಸ್ತೋತ್ರವಾಗಲಿ.