84
ರಚನೆಗಾರರು: ಕೋರಹೀಯರು. 
 1 ಸೇನಾಧೀಶ್ವರನಾದ ಯೆಹೋವನೇ, ನಿನ್ನ ಆಲಯವು ಎಷ್ಟೋ ರಮ್ಯವಾಗಿದೆ. 
 2 ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. 
ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ. 
 3 ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, 
ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. 
ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ 
ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ. 
 4 ನಿನ್ನ ಆಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! 
ಅವರು ನಿನ್ನನ್ನು ನಿತ್ಯವೂ ಸ್ತುತಿಸುತ್ತಿರುವರು. 
 5 ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೀಯೋನ್ ಪರ್ವತಕ್ಕೆ 
ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು. 
 6 ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು. 
ಮುಂಗಾರು ಮಳೆಯು ಅದನ್ನು ನೀರಿನ ತೊರೆಗಳಿಂದ ಸಮೃದ್ಧಿಗೊಳಿಸುವುದು. 
 7 ಜನರು ದೇವರನ್ನು ಸಂದರ್ಶಿಸಲು 
ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು. 
 8 ಸೇನಾಧೀಶ್ವರ ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. 
ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು. 
 9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. 
ನೀನು ಅಭಿಷೇಕಿಸಿದವನಿಗೆ ಕರುಣೆತೋರು. 
 10 ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ 
ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. 
ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ 
ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.* ದುಷ್ಟರ … ಉತ್ತಮ ಅಥವಾ “ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲ ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುವುದೇ ಉತ್ತಮ.” 
 11 ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ.† ಸಂರಕ್ಷಕನೂ … ರಾಜನೂ ಆಗಿದ್ದಾನೆ ಅಕ್ಷರಶಃ, “ಸೂರ್ಯ ಮತ್ತು ಗುರಾಣಿ.” 
ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. 
ಆತನು ಎಲ್ಲಾ ಒಳ್ಳೆಯವುಗಳನ್ನು 
ತನ್ನ ಭಕ್ತರಿಗೆ ಕೊಡುವನು. 
 12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ!