8
ರಚನೆಗಾರ: ದಾವೀದ. 
1 ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. 
ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು. 
2 ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; 
ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ. 
3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ 
ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು. 
4 ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? 
ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? 
ಮನುಷ್ಯರು ಎಷ್ಟರವರು? 
ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು? 
5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. 
ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. 
ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ. 
6 ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. 
ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ. 
7 ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು. 
8 ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ 
ದೊರೆತನ ಮಾಡುವರು. 
9 ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.