ಕೀರ್ತನೆಗಳು
ಮೊದಲನೆ ಭಾಗ
(ಕೀರ್ತನೆಗಳು 1-41)
1ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ,
ಪಾಪಿಗಳಂತೆ ಜೀವಿಸದೆ,
ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ
ಅವನೇ ಭಾಗ್ಯವಂತನು.
2ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ
ಅದನ್ನೇ ಹಗಲಿರುಳು ಧ್ಯಾನಿಸುವನು.
3ಅವನು ನೀರಿನ ಕಾಲುವೆಗಳ ಬಳಿಯಲ್ಲಿ
ಹುಲುಸಾಗಿ ಬೆಳೆದಿರುವ ಮರದಂತಿರುವನು.
ಆ ಮರವು ತಕ್ಕಕಾಲದಲ್ಲಿ ಫಲಿಸುವುದು;
ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು;
ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.
4ದುಷ್ಟರಾದರೋ ಹಾಗಲ್ಲ!
ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.
5ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು.
ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ.
6ಯೆಹೋವನು ನೀತಿವಂತರನ್ನು ಸಂರಕ್ಷಿಸುವನು;
ದುಷ್ಟರನ್ನಾದರೊ ನಾಶಪಡಿಸುವನು.