ಸ್ತುತಿಗೀತೆ. ರಚನೆಗಾರ: ದಾವೀದ.
1ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ
ಸಂಪೂರ್ಣವಾಗಿ ತಿಳಿದುಕೊಂಡಿರುವೆ.
2ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ.
ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.
3ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ.
ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.
4ಯೆಹೋವನೇ, ನನ್ನ ಬಾಯಿಂದ ಮಾತುಗಳು ಹೊರಡುವುದಕ್ಕಿಂತ ಮೊದಲೇ
ನಾನು ಹೇಳಬೇಕೆಂದಿರುವುದು ನಿನಗೆ ತಿಳಿದಿದೆ.
5ನೀನು ನನ್ನ ಸುತ್ತಲೂ ಆವರಿಸಿರುವೆ;
ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ.
6ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ,
ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.
7ನಾನು ನಿನ್ನ ಆತ್ಮದಿಂದ ತಪ್ಪಿಸಿಕೊಳ್ಳಲು ಎಲ್ಲಿಗೆ ಓಡಿಹೋಗಲಿ!
ನಿನ್ನ ಕಣ್ಣಿಗೆ ಮರೆಯಾಗಲು ಎಲ್ಲಿಗೆ ಹೋಗಲಿ?
8ನಾನು ಪರಲೋಕಕ್ಕೆ ಏರಿಹೋದರೆ ಅಲ್ಲಿಯೂ ನೀನಿರುವೆ.
ಪಾತಾಳಕ್ಕೆ ಇಳಿದುಹೋದರೆ ಅಲ್ಲಿಯೂ ನೀನಿರುವೆ.
9ಪೂರ್ವದಿಕ್ಕಿನಲ್ಲಿ ಸೂರ್ಯನು ಉದಯಿಸುವ ಸ್ಥಳಕ್ಕೆ ಹೋದರೆ ಅಲ್ಲಿಯೂ ನೀನಿರುವೆ
ಪಶ್ಚಿಮದಿಕ್ಕಿನಲ್ಲಿ ಸಮದ್ರದ ಕಟ್ಟಕಡೆಗೆ ಹೋದರೆ ಅಲ್ಲಿಯೂ ನೀನಿರುವೆ.
10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು.
ನಿನ್ನ ಬಲಗೈ ನನ್ನನ್ನು ಭದ್ರವಾಗಿ ಹಿಡಿದಿರುವುದು.
11ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ,
“ಹಗಲು ಹೋಗಿ ಕತ್ತಲಾಯಿತು,
ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು.
12ಆದರೆ ಕಾರ್ಗತ್ತಲೆಯೂ ನಿನಗೆ ಕತ್ತಲೆಯಲ್ಲ.
ಕಾರ್ಗತ್ತಲೆಯು ನಿನಗೆ ಹಗಲಿನಂತೆ ಪ್ರಕಾಶಮಾನವಾಗಿರುವುದು.
13ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ.
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ.
14ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.
ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.
15ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ.
ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ.
16ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ.
ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
17ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ.
ಅವು ಅಸಂಖ್ಯಾತವಾಗಿವೆ.
18ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ.
ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.
19ಯೆಹೋವನೇ, ದುಷ್ಟರನ್ನು ಸಂಹರಿಸು.
ಆ ಕೊಲೆಗಾರರನ್ನು ನನ್ನಿಂದ ದೂರಮಾಡು.
20ಆ ದುಷ್ಟರು ನಿನ್ನನ್ನು ದೂಷಿಸುತ್ತಾರೆ.
ಅಯೋಗ್ಯಕ್ಕಾಗಿ ನಿನ್ನ ಹೆಸರನ್ನು ಹೇಳುತ್ತಾರೆ.
21ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನೂ ದ್ವೇಷಿಸುವೆನು.
ನಿನ್ನನ್ನು ವಿರೋಧಿಸುವವರನ್ನು ನಾನೂ ವಿರೋಧಿಸುವೆನು.
22ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುವೆನು!
ನಿನ್ನ ವೈರಿಗಳನ್ನು ನನ್ನ ವೈರಿಗಳೆಂದೇ ಪರಿಗಣಿಸಿದ್ದೇನೆ.
23ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೊ.
ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೊ.
24ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೊ.
ನನ್ನನ್ನು ಸನಾತನ ಮಾರ್ಗದಲ್ಲಿ ನಡೆಸು.