ರಚನೆಗಾರ: ದಾವೀದ.
1ಯೆಹೋವನು ನನಗೆ ಬಂಡೆಯಾಗಿದ್ದಾನೆ.
ಆತನಿಗೆ ಸ್ತೋತ್ರವಾಗಲಿ.
ಆತನು ನನ್ನನ್ನು ಯುದ್ಧಕ್ಕೂ
ಕದನಕ್ಕೂ ತರಬೇತು ಮಾಡುವನು.
2ಆತನು ನನ್ನನ್ನು ಪ್ರೀತಿಸುವ ದೇವರೂ
ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ.
3ಯೆಹೋವನೇ, ಮನುಷ್ಯರು ಎಷ್ಟು ಮಾತ್ರದವರು?
ನೀನು ಅವರನ್ನು ಯಾಕೆ ನೆನಸಬೇಕು?
ಮನುಷ್ಯರು ಎಷ್ಟರವರು?
ನೀನು ಅವರನ್ನು ಯಾಕೆ ಗಮನಿಸಬೇಕು?
4ಮನುಷ್ಯರು ಕೇವಲ ಉಸಿರೇ.
ಅವರ ಜೀವಮಾನವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
5ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ.
ಪರ್ವತಗಳನ್ನು ಮುಟ್ಟು. ಆಗ ಅವುಗಳಿಂದ ಹೊಗೆಯು ಮೇಲೇರುವುದು.
6ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು.
ನಿನ್ನ ಬಾಣಗಳಿಂದ ಅವರನ್ನು ಓಡಿಸಿಬಿಡು.
7ಮೇಲಿನ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ
ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೊ.
ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು.
8ಅವರ ಬಾಯಿ ಸುಳ್ಳುಗಳಿಂದ ತುಂಬಿವೆ.
ಅವರ ಬಲಗೈ ಮೋಸದಿಂದ ತುಂಬಿವೆ.
9ಯೆಹೋವನೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು.
ನಾನು ಹತ್ತು ತಂತಿಗಳ ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಸ್ತುತಿಸುವೆನು.
10ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ.
ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.
11ಈ ಅನ್ಯಜನರಿಂದ ನನ್ನನ್ನು ರಕ್ಷಿಸು.
ಅವರ ಬಾಯಿಗಳು ಸುಳ್ಳುಗಳಿಂದ ತುಂಬಿವೆ.
ಅವರ ಬಲಗೈಗಳು ಮೋಸದಿಂದ ತುಂಬಿವೆ.
12ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ.
ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು.
13ನಮ್ಮ ಕಣಜಗಳು ಸಕಲ ಬಗೆಯ ದವಸಧಾನ್ಯಗಳಿಂದ ತುಂಬಿರುತ್ತವೆ.
ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುತ್ತವೆ.
14ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ.
ಯಾವ ಶತ್ರುಗಳೂ ನುಗ್ಗಿಬರಲು ಪ್ರಯತ್ನಿಸುತ್ತಿಲ್ಲ.
ನಾವು ಯುದ್ಧಕ್ಕೆ ಹೋಗುವುದೂ ಇಲ್ಲ;
ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.
15ಇಂಥ ಸುಸ್ಥಿತಿಯಲ್ಲಿರುವ ಜನರೇ ಧನ್ಯರು.
ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರೇ ಭಾಗ್ಯವಂತರು.