4
ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ. ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ. ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ:
 
“ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು
ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಕೀರ್ತನೆ. 95:11
 
ಈ ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು. ಪವಿತ್ರ ಗ್ರಂಥದ ಒಂದು ಭಾಗದಲ್ಲಿ ಆತನು ವಾರದ ಏಳನೆಯ ದಿನದ ಬಗ್ಗೆ ಹೀಗೆ ಮಾತಾಡಿದ್ದಾನೆ: “ಆದ್ದರಿಂದ ದೇವರು ತನ್ನ ಕಾರ್ಯಗಳನ್ನೆಲ್ಲ ಮುಗಿಸಿ ಏಳನೆಯ ದಿನ ವಿಶ್ರಾಂತಿ ಹೊಂದಿದನು.” ಉಲ್ಲೇಖನ: ಆದಿಕಾಂಡ 2:2. ಪವಿತ್ರ ಗ್ರಂಥದ ಇನ್ನೊಂದು ಭಾಗದಲ್ಲಿ ಆತನು, “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ” ಉಲ್ಲೇಖನ: ಕೀರ್ತನೆ. 95:11. ವೆಂದೂ ಹೇಳಿದ್ದಾನೆ.
ಆದ್ದರಿಂದ ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುತ್ತಾರೆಂಬುದು ಇನ್ನೂ ಖಚಿತವಾಗಿದೆ. ಆದರೆ ರಕ್ಷಣಾಮಾರ್ಗವನ್ನು ಮೊದಲು ಕೇಳಿದ ಜನರು ಪ್ರವೇಶಿಸಲಿಲ್ಲ. ಅವರು ವಿಧೇಯರಾಗದೆ ಇದ್ದುದರಿಂದ ಅವರು ಸೇರಲಿಲ್ಲ. ಆದ್ದರಿಂದ ಆತನು ಮತ್ತೊಂದು ವಿಶೇಷ ದಿನವನ್ನು ಯೋಜಿಸಿದನು. ಅದನ್ನು “ಈ ಹೊತ್ತು” ಎಂದು ಕರೆಯಲಾಗಿದೆ. ಆತನು ಆ ದಿನವನ್ನು ಕುರಿತು ಬಹುಕಾಲದ ನಂತರ ದಾವೀದನ ಮೂಲಕ ತಿಳಿಸಿದನು. ಪವಿತ್ರ ಗ್ರಂಥದ ಈ ಭಾಗವನ್ನು ನಾವು ಮೊದಲೊಮ್ಮೆ ನೋಡಿದೆವು:
 
“ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಕೀರ್ತನೆ. 95:7-8
 
ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ. ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ. 10 ಆತನು ತನ್ನ ಕಾರ್ಯವನ್ನು ಮುಗಿಸಿದ ನಂತರ ವಿಶ್ರಾಂತಿ ಹೊಂದಿದನು. ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸುವವನು ಆತನು ಮಾಡಿದಂತೆ ತನ್ನ ಕಾರ್ಯವನ್ನು ಮುಗಿಸಿದವನಾಗಿರಬೇಕು. 11 ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ನಮ್ಮಿಂದಾದಷ್ಟು ಪ್ರಯತ್ನಿಸೋಣ. ಆತನಿಗೆ ಅವಿಧೇಯರಾದ ಆ ಜನರನ್ನು ಅನುಸರಿಸಿ ನಮ್ಮಲ್ಲಿ ಯಾರೂ ವಿಫಲರಾಗದಂತೆ ನೋಡಿಕೊಳ್ಳೋಣ.
12 ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ. 13 ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.
ದೇವರ ಸನ್ನಿಧಿಗೆ ಬರಲು ಯೇಸುವಿನ ಸಹಾಯ
14 ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ. 15 ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ. 16 ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.

4:4: ಉಲ್ಲೇಖನ: ಆದಿಕಾಂಡ 2:2.

4:5: ಉಲ್ಲೇಖನ: ಕೀರ್ತನೆ. 95:11.