೧೩
ಪ್ರೀತಿಯ ಶ್ರೇಷ್ಠತೆ
೧ ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ. ೨ ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ. ೩ ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
೪ ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚು ಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ೫ ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ೬ ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. ೭ ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
೮ ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳುವಳಿಕೆಯೋ ಇಲ್ಲದಂತಾಗುವುದು. ೯ ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ. ೧೦ ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು. ೧೧ ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು. ೧೨ ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು. ೧೩ ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.